ಹಾವೇರಿ: ಕೊರೊನಾ ಭೀತಿಯ ನಡುವೆ ನಾಳೆಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ.. ಇದಕ್ಕಾಗಿ ಪ್ರತಿಯೊಂದು ಜಿಲ್ಲೆಗಳು ರೆಡಿಯಾಗಿವೆ.. ಹಾವೇರಿ ಜಿಲ್ಲೆಯಲ್ಲೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸುರಕ್ಷಾ ವಿಧಾನಗಳೊಂದಿಗೆ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ, ಮಕ್ಕಳು ಯಾವುದೇ ಭಯ ಇಲ್ಲದೇ ನಾಳೆ ನಡೆಯುವ ಪರೀಕ್ಷೆಗೆ ಹಾಜರಾಗಬೇಕಿದೆ ಎಂದು ಶಿಕ್ಷಣ ಇಲಾಖೆ ಮನವಿ ಮಾಡಿದೆ.
ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಯೋಗಿಕವಾಗಿ ಸುರಕ್ಷತಾ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು ಎಂಬುವುದರ ಬಗ್ಗೆ ಶಿಕ್ಷಕರಿಗೆ ತರಬೇತಿ ನೀಡಲಾಯಿತು. ಒಂದು ಕೊಠಡಿಯಲ್ಲಿ ಹದಿನಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಒಂದುವರೆ ಮೀಟರ್ ನಷ್ಟು ಅಂತರಕಾಯ್ದುಕೊಂಡು ನಿರಾತಂಕವಾಗಿ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 75 ಮುಖ್ಯ ಪರೀಕ್ಷಾ ಕೇಂದ್ರಗಳು, 15 ಬ್ಲಾಕ್ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 22,511 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದಾರೆ. 407 ವಿದ್ಯಾರ್ಥಿಗಳು ಹೊರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡು ವಲಸೆ ಹೋಗಿದ್ದಾರೆ. 695 ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಹಾವೇರಿಯಲ್ಲಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಒಟ್ಟು 1420 ಕೊಠಡಿಗಳನ್ನು ಪರೀಕ್ಷಾ ಕೇಂದ್ರಗಳಾಗಿ ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ..
ಇನ್ನು 1006 ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 75 ಮುಖ್ಯ ಕೊಠಡಿಗಳಿಗೆ, 91 ಕೇಂದ್ರಗಳ ಕಾರಿಡಾರ್ ಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 75 ಮುಖ್ಯ ಅಧೀಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಸಂಪರ್ಕ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬರಲು ಅಡೆ ತಡೆಯಾಗದಂತೆ ಸಾರಿಗೆ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲಾಗಿದೆ.
ಇನ್ನೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್, ಹೋಂಗಾಡ್ರ್ಸ್ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ನಿಯಮಗಳು ಉಲ್ಲಂಘನೆಯಾಗದಂತೆ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.